ಕುಷ್ಟಗಿ, ಜುಲೈ 21: ಜಿಲ್ಲಾ ಪಂಚಾಯತ್ ಕೊಪ್ಪಳ ಹಾಗೂ ತಾಲೂಕು ಪಂಚಾಯತ್ ಕುಷ್ಟಗಿ ಪಟ್ಟಣದ ಸರ್ಕ್ಯೂಟ್ ಹೌಸ್ ನಲ್ಲಿ ಇಂದು (21/07/2026) ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ದೊಡ್ಡನಗೌಡ ಹೆಚ್. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಪೊಲೀಸ್ ಇಲಾಖೆಯ ಪರಿಣಾಮಕಾರಿ ಕಾರ್ಯನಿರ್ವಹಣೆಗೆ ವಿಶೇಷ ಪ್ರಶಂಸೆ ವ್ಯಕ್ತವಾಯಿತು.
ಸಭೆಯಲ್ಲಿ ಕುಷ್ಟಗಿ ತಾಲೂಕಿನ ವಿವಿಧ ಇಲಾಖೆಗಳ ಅನುಷ್ಠಾನ ಅಧಿಕಾರಿಗಳು ಭಾಗವಹಿಸಿ, ತಮ್ಮ ಇಲಾಖೆಗಳ ಪ್ರಗತಿ, ಸಾಧನೆ ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ವಿವರವಾದ ವರದಿ ಮಂಡಿಸಿದರು. ಈ ವೇಳೆ ಪೊಲೀಸ್ ಇಲಾಖೆಯ ಪರವಾಗಿ ಸಿಪಿಐ ವಿಶ್ವನಾಥ ಹಿರೇಗೌಡ ಅವರು ತಾಲೂಕಿನ ಕಾನೂನು ಸುವ್ಯವಸ್ಥೆ, ಅಪರಾಧ ನಿಯಂತ್ರಣ ಹಾಗೂ ಇಲಾಖೆಯ ನಿರಂತರ ಕಾರ್ಯಾಚರಣೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು.

ತಾಲೂಕಿನ ಮೂರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಅಕ್ರಮ ಚಟುವಟಿಕೆಗಳ ವಿರುದ್ಧ ಪೊಲೀಸ್ ಇಲಾಖೆ ಸಮರೋಪಾದಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದು, ಓಸಿ (ಮಟ್ಕಾ), ಇಸ್ಪೀಟ್ ಜೂಜಾಟ ಸೇರಿದಂತೆ ಕಾನೂನುಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಕ್ರಿಕೆಟ್ ಬೆಟ್ಟಿಂಗ್, ಗಾಂಜಾ ಮಾರಾಟ ಹಾಗೂ ಇತರೆ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದವರ ವಿರುದ್ಧ ಪ್ರಕರಣ ದಾಖಲಿಸಿ, ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಲಾಗಿದೆ ಎಂದು ವಿವರಿಸಿದರು.
ಸಾಮಾಜಿಕ ಜಾಲತಾಣಗಳ ದುರ್ಬಳಕೆಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ನಿಗಾ ವಹಿಸಿದ್ದು, ವ್ಯಕ್ತಿಗಳ ಗೌರವಕ್ಕೆ ಧಕ್ಕೆ ತರುವ ಪೋಸ್ಟ್‌ಗಳು, ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಉಂಟುಮಾಡುವ ಪ್ರಚೋದನಾತ್ಮಕ ಸಂದೇಶಗಳು ಹಾಗೂ ಅಶ್ಲೀಲ, ಅವಹೇಳನಕಾರಿ ವಿಷಯಗಳನ್ನು ಪ್ರಸಾರ ಮಾಡುವವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಿಪಿಐ ವಿಶ್ವನಾಥ ಹಿರೇಗೌಡ ಎಚ್ಚರಿಕೆ ನೀಡಿದರು.
ಇದೇ ಸಂದರ್ಭದಲ್ಲಿ ತಾಲೂಕಿನ ಟ್ರಾಫಿಕ್ ವ್ಯವಸ್ಥೆಯನ್ನು ಮತ್ತಷ್ಟು ಸುಗಮಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಶಾಸಕ ದೊಡ್ಡನಗೌಡ ಹೆಚ್. ಪಾಟೀಲ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು. ಸಾರ್ವಜನಿಕರ ಸುರಕ್ಷತೆ, ಸುಗಮ ಸಂಚಾರ ಹಾಗೂ ಶಾಂತಿಯುತ ವಾತಾವರಣ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸಲಹೆ ನೀಡಿದರು.
ಸಭೆಯಲ್ಲಿ ಪೊಲೀಸ್ ಇಲಾಖೆಯ ಶಿಸ್ತುಬದ್ಧ ಕಾರ್ಯನಿರ್ವಹಣೆ, ಅಕ್ರಮ ಚಟುವಟಿಕೆಗಳ ವಿರುದ್ಧದ ನಿರಂತರ ದಾಳಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ತೋರಿದ ಬದ್ಧತೆಯನ್ನು ಶಾಸಕ ದೊಡ್ಡನಗೌಡ ಹೆಚ್. ಪಾಟೀಲ ಅವರು ಮುಕ್ತಕಂಠದಿಂದ ಶ್ಲಾಘಿಸಿದರು. ಸಿಪಿಐ ವಿಶ್ವನಾಥ ಹಿರೇಗೌಡ ಅವರ ನೇತೃತ್ವದಲ್ಲಿ ಪೊಲೀಸ್ ಇಲಾಖೆ ಜನರ ವಿಶ್ವಾಸ ಗಳಿಸುವ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇದೇ ಜನಪರ ಸೇವಾ ಮನೋಭಾವವನ್ನು ಮುಂದುವರಿಸುವಂತೆ ಪ್ರೋತ್ಸಾಹಿಸಿದರು.
ಕೆಡಿಪಿ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ, ಸರ್ಕಾರದ ಯೋಜನೆಗಳು ಹಾಗೂ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಪರಿಣಾಮಕಾರಿಯಾಗಿ ತಲುಪುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಲಾಯಿತು
